Breaking News
ಶಿವಮೊಗ್ಗ ರಾಜಕೀಯ

ಶಿವಮೊಗ್ಗ ರಾಜಕೀಯ

2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಶಿಕಾರಿಪುರದಿಂದ ಯಡಿಯೂರಪ್ಪ ಸ್ಪರ್ಧಿಸಿ ಗೆದ್ದಿದ್ದವರು. 2014ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ನಡೆದ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.

ಶಿಕಾರಿಪುರ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸೋಲಿಲ್ಲದ ಸರದಾರರು ಅಲ್ಲ. 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ.ಎಸ್.ಮಹಾಲಿಂಗಪ್ಪ ಅವರು 7561 ಮತಗಳ ಅಂತರದಿಂದ ಯಡಿಯೂರಪ್ಪ ಅವರನ್ನು ಸೋಲಿಸಿದ್ದರು. ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಶೀಕಾರಿಪುರ ಕ್ಷೇತ್ರದಲ್ಲಿ ಭಾರೀ ಪ್ರಭಾವ ಹೊಂದಿದ್ದಾರೆ. ಅವರ ವಿರುದ್ಧ ಗೆಲ್ಲುವುದು ಅಷ್ಟು ಸುಲಭವಲ್ಲ. 2013ರ ಚುನಾವಣೆಯಲ್ಲಿ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಯಡಿಯೂರಪ್ಪ ಅವರು 69,126 ಮತಗಳನ್ನು ಪಡೆದಿದ್ದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಯಡಿಯೂರಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿ.ವೈ.ರಾಘವೇಂದ್ರ ಅವರು 71,547 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಅವರೇ ಆಗಿರುವುದರಿಂದ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ.ವೈ.ರಾಘವೇಂದ್ರ. ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಿದರೆ ರಾಘವೇಂದ್ರ ಅವರು ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಎಂಬುದು ಪ್ರಶ್ನೆಯಾಗಿತ್ತು. ಅವರು ಹಾವೇರಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ, ಸದ್ಯದ ಮಾಹಿತಿ ಪ್ರಕಾರ ಬಿ.ವೈ.ರಾಘವೇಂದ್ರ ತಂದೆಗೆ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ. 2019 ರ ಲೋಕಸಭೆ ಚುನಾವಣೆಗೆ ಅವರು ಶಿವಮೊಗ್ಗದಿಂದ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಯಾರೂ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

ಶಿಕಾರಿಪುರ ಕ್ಷೇತ್ರ ಪ್ರತಿ ಚುನಾವಣೆಯಲ್ಲಿಯೂ ಕುತೂಹಲ ಕೆರಳಿಸುವ ಕ್ಷೇತ್ರ. 2008ರ ವಿಧಾನಸಭೆ ಚುನಾವಣೆಯಲ್ಲಿಯೂ ಎಸ್.ಬಂಗಾರಪ್ಪ ಅವರು ಸಮಾಜವಾದಿ ಪಕ್ಷದಿಂದ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದಾಗ ಕ್ಷೇತ್ರ ಕುತೂಹಲ ಹುಟ್ಟಿಸಿತ್ತು. 2014ರ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಸ್ಪರ್ಧಿಸಿದಾಗಲೂ ಕುತೂಹಲ ಕೆರಳಿಸಿದ ಕ್ಷೇತ್ರವಾಗಿತ್ತು. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಕಾಂಗ್ರೆಸ್ ಜೊತೆ ಕೈ ಜೋಡಿಸಿತ್ತು. ರಾಘವೇಂದ್ರ ಅವರು 71,547 ಮತ ಪಡೆದರೆ, ಕಾಂಗ್ರೆಸ್‌ನ ಶಾಂತವೀರಪ್ಪ ಗೌಡ 65,117 ಮತಗಳನ್ನು ಪಡೆದಿದ್ದರು. ಶಿಕಾರಿಪುರ ಕ್ಷೇತ್ರದಲ್ಲಿ ಅಪ್ಪ-ಮಗನ ಪಾರುಪತ್ಯವನ್ನು ಮುರಿಯುವುದು ಅಷ್ಟು ಸುಲಭದ ಮಾತಲ್ಲ. ಈ ಬಾರಿಯ ಚುನಾವಣೆಗೆ ಜೆಡಿಎಸ್ ಎಚ್.ಟಿ.ಬಳಿಗಾರ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂದು ಕಾದು ನೋಡಬೇಕಿದೆ.

Leave a Reply

Your email address will not be published.